ಬೆಂಗಳೂರು : ಬರಗಾಲ ಮತ್ತು ಬೇಸಿಗೆಗೆ ನಮ್ಮ ದೇಶವೂ ಸೇರಿದಂತೆ ಜಗತ್ತಿನ ಹಲವೆಡೆ ನೀರಿನ ಕೊರತೆ ಉಂಟಾಗಿರುವುದು ನಿಸರ್ಗ ಸಹಜ ವಿದ್ಯಮಾನದ ಪರಿಣಾಮವಾಗಿದೆ. ಇದಕ್ಕೆ ಕೇರಳವೂ ಹೊರತಲ್ಲ. ಈ ಸಂದರ್ಭದಲ್ಲಿ ಅಲ್ಲಿನ ಕೈಗಾರಿಕಾ ಸಚಿವರಾದ ಪಿ. ರಾಜೀವ್ ಅವರು ಬೆಂಗಳೂರಿನಲ್ಲಿ ನೀರಿಲ್ಲವೆಂದು ತಮ್ಮ ರಾಜ್ಯಕ್ಕೆ ಬರುವಂತೆ ಇಲ್ಲಿನ ಐ.ಟಿ. ಕಂಪನಿಗಳಿಗೆ ಆಹ್ವಾನಿಸಿರುವುದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಇದು ಒಕ್ಕೂಟ ವ್ಯವಸ್ಥೆಯ ತತ್ತ್ವಕ್ಕೆ ವಿರುದ್ಧವಾದುದು. ಅವರ ಈ ನಡವಳಿಕೆ ಆರೋಗ್ಯಕರವಲ್ಲ, ಖಂಡನೀಯ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಒಕ್ಕೂಟ ವ್ಯವಸ್ಥೆಯಲ್ಲಿ ಪರಸ್ಪರ ಕೊಡು-ಕೊಳ್ಳುವಿಕೆ ಇರಬೇಕೇ ವಿನಾ ಪರಿಸ್ಥಿತಿಯ ದುರ್ಲಾಭ ಪಡೆಯಲು ನೋಡಬಾರದು. ಇದರಿಂದ ಯಾರಿಗೂ ಒಳಿತಾಗುವುದಿಲ್ಲ. ಈ ಪ್ರಾಥಮಿಕ ಸತ್ಯವನ್ನು ಕೇರಳದ ಸಚಿವರು ಅರ್ಥ ಮಾಡಿಕೊಳ್ಳಬೇಕು.
ನಮ್ಮಲ್ಲಿ ಕೇರಳ ಮೂಲದ ಲಕ್ಷಾಂತರ ಯುವಕ- ಯುವತಿಯರು ನೆಮ್ಮದಿಯಿಂದ ಕೆಲಸ ಮಾಡುತ್ತಿದ್ದಾರೆ ಎನ್ನುವುದನ್ನು ಅವರು ಮರೆಯಬಾರದು. ಕೇರಳ ಒಂದು ರಾಜ್ಯವಾಗಿ ಎಷ್ಟು ಬೇಕಾದರೂ ಬಂಡವಾಳ ಆಕರ್ಷಿಸಲಿ. ಆ ಸ್ವಾತಂತ್ರ್ಯ ಅವರಿಗಿದೆ. ಅದು ಬಿಟ್ಟು ಕ್ಷುಲ್ಲಕ ರಾಜಕಾರಣ ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ಕಳೆದ ಎರಡೂವರೆ ದಶಕಗಳಲ್ಲಿ ಬೆಂಗಳೂರು ದೇಶದ ಹೊಸ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಕೇರಳಕ್ಕೆ ಇಂತಹ ಸಾಧನೆ ಸಾಧ್ಯವಾಗಿಲ್ಲ. ನೀರಿನ ಕೊರತೆಯನ್ನೇ ಮುಂದಿಟ್ಟುಕೊಂಡು ಇನ್ನೊಬ್ಬರ ಅವಕಾಶಗಳನ್ನು ಕಸಿದುಕೊಳ್ಳುತ್ತೇವೆ ಎನ್ನುವ ಚಿಂತನೆ ಅತ್ಯಂತ ಅಪಾಯಕಾರಿಯಾದು.
ಪ್ರತ್ಯೇಕ ನೀರು ಸರಬರಾಜು ವ್ಯವಸ್ಥೆ:
ವಿಜಯಪುರದ ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಆಲಮಟ್ಟಿ, ಧಾರವಾಡ, ಕಿತ್ತೂರು, ದುರ್ಗದಕೇರಿ ಕೈಗಾರಿಕಾ ಪ್ರದೇಶಗಳಿಗೆ ಮಲಪ್ರಭಾ ನದಿಯಿಂದ ನೀರು ಸರಬರಾಜು ಮಾಡುವ ಯೋಜನೆಗೆ ಟೆಂಡರ್ ಕರೆದಿದ್ದು, ಅನುಷ್ಠಾನದ ಹಂತದಲ್ಲಿ ಇದೆ. ರಾಜ್ಯದ ಎಲ್ಲೆಡೆ ಈ ರೀತಿಯ ಯೋಜನೆಗಳನ್ನು ರೂಪಿಸುತ್ತಿದ್ದು, ಕೈಗಾರಿಕಾ ಪ್ರದೇಶಗಳಿಗೆ ಪ್ರತ್ಯೇಕ ನೀರು ಸರಬರಾಜಿಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನ ಕೈಗಾರಿಕಾ ಪ್ರದೇಶಗಳಿಗೆ ಕಾವೇರಿ ನದಿಯಿಂದ ನೀರು ತರುವ ಪ್ರತ್ಯೇಕ ಯೋಜನೆ ಜಾರಿ ಸಂಬಂಧ ಹಲವು ಸಭೆಗಳನ್ನು ನಡೆಸಿ, ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದರು.