ಕೋಲ್ಕತ್ತಾ:ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯದ ವಿವಿಧೆಡೆ ಭುಗಿಲೆದ್ದಿರುವ ಹಿಂಸಾಚಾರವನ್ನು ಹತ್ತಿಕ್ಕಲು ಪೊಲೀಸರು ಭಾರಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಈವರೆಗೆ ನಡೆದ ಸಂಘರ್ಷದಲ್ಲಿ ಇಬ್ಬರು ಸಾವನ್ನಪ್ಪಿರುವುದನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು (DGP) ಖಚಿತಪಡಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ನೂರಾರು ಜನರನ್ನು ಜೈಲಿಗಟ್ಟಲಾಗಿದೆ.
ರಾಜ್ಯಾದ್ಯಂತ ನಡೆದ ಹಿಂಸಾಚಾರ, ಬೆಂಕಿ ಹಚ್ಚುವಿಕೆ ಮತ್ತು ಲೂಟಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಈವರೆಗೆ 433 ಜನರನ್ನು ಬಂಧಿಸಲಾಗಿದೆ ಎಂದು ಬಂಗಾಳ ಡಿಜಿಪಿ ತಿಳಿಸಿದ್ದಾರೆ.
ಗಲಭೆ ಮತ್ತು ಶಾಂತಿ ಭಂಗದ ಆರೋಪದಡಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ 200ಕ್ಕೂ ಹೆಚ್ಚು ಎಫ್‌ಐಆರ್ (FIR) ದಾಖಲಿಸಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡುವವರ ಮೇಲೂ ಕಣ್ಣಿಡಲಾಗಿದೆ.
ಚುನಾವಣೋತ್ತರ ಘರ್ಷಣೆಯಲ್ಲಿ ಈವರೆಗೆ ಕೇವಲ ಇಬ್ಬರು ಮಾತ್ರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಅಧಿಕೃತವಾಗಿ ತಿಳಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಿದೆ ಎಂಬ ವದಂತಿಗಳನ್ನು ನಂಬಬಾರದು ಎಂದು ಮನವಿ ಮಾಡಿದ್ದಾರೆ.








