ಬೆಳಗಾವಿ: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಬಗ್ಗೆ ಸಲ್ಲಿಸಲಾಗಿರುವ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಈ ಬಗ್ಗೆ ಅವರೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕಾ ಖರ್ಗೆ ಹೇಳಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್ ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಕೇರಳ ರಾಜ್ಯದಲ್ಲಿ ರುವಂತೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡಲು ಸಾಧ್ಯವಿಲ್ಲ ಆದರೆ ಹೆಚ್ಚಳ ಮಾಡುವ ಕುರಿತ ಮನವಿಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದರು.
ಗ್ರಾಮ ಪಂಚಾಯತ್ ಸದಸ್ಯರಿಗೆ ಪಿಂಚಣಿ, ಉಚಿತ ಬಸ್ ಪಾಸ್ ಮತ್ತು ಆರೋಗ್ಯ ವಿಮೆ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದಿಲ್ಲ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟಗಳು ಸಲ್ಲಿಸಿರುವ ಬೇಡಿಕೆಗಳ ಕುರಿತು ಪರಿಶೀಲಿಸಲಾಗಿರುತ್ತದೆ.
ಅಧಿಕಾರಿ/ ಕೆಲವು ಸಿಬ್ಬಂದಿಗಳ ಸೇವಾ ವಿಷಯ/ ಬೇಡಿಕೆಗಳನ್ನು ಪರಿಶೀಲಿಸಲು ಆಯುಕ್ತರು, ಪಂಚಾಯತ್ ರಾಜ್ ಆಯುಕ್ತಾಲಯ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಸದರಿ ಸಮಿತಿಗೆ ಪರಿಶೀಲಿಸಿ ವರದಿಯನ್ನು ಸಲ್ಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಸಮಿತಿ ವರದಿ ಸಲ್ಲಿಸಿದ ನಂತರ ಬೇಡಿಕೆಗಳ ಕುರಿತು ಪರಿಶೀಲಿಸಿ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.