ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುತ್ತಿರುವ ಸಹಾಯಧನವನ್ನು ಖಾಸಗಿ ಫೈನಾನ್ಸ್ ಸಂಸ್ಥೆಗಳು ಬಲವಂತವಾಗಿ ಕಡಿತಗೊಳಿಸುತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ದಬಾಳಿಕೆಗೆ ತಕ್ಷಣವೇ ಕಡಿವಾಣ ಹಾಕುವಂತೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ದಿನೇಶ್ ಗೂಳಿಗೌಡರ ಮನವಿಗೆ ಸಿಎಂ ಸ್ಪಂದನೆ
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಈ ಕುರಿತು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದರು. ಖಾಸಗಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಮತ್ತು ಕೆಲವು ಸ್ತ್ರೀ ಶಕ್ತಿ ಸಂಘಗಳು ಹಳೆಯ ಸಾಲದ ಬಾಕಿ ಅಥವಾ ಬಡ್ಡಿಯ ಹೆಸರಿನಲ್ಲಿ ಫಲಾನುಭವಿಗಳ ಹಣವನ್ನು ಕಸಿದುಕೊಳ್ಳುತ್ತಿವೆ ಎಂದು ಅವರು ಗಮನ ಸೆಳೆದಿದ್ದರು.
ಜಿಲ್ಲಾಧಿಕಾರಿಗಳಿಗೆ ತುರ್ತು ನಿರ್ದೇಶನ
ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಈ ಕುರಿತು ಕ್ರಮ ವಹಿಸಲು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿಗಳ ಕಾರ್ಯದರ್ಶಿಯವರು ಕೆಳಕಂಡ ಅಧಿಕಾರಿಗಳಿಗೆ ತುರ್ತು ನಿರ್ದೇಶನ ನೀಡಿದ್ದಾರೆ:
- ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು.
- ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು.
- ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು (DCs).
- ಎಲ್ಲಾ ಜಿಲ್ಲಾ ಪಂಚಾಯಿತಿ ಸಿಇಒಗಳು (CEOs).
ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಆದ್ಯತೆ
ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಯೋಜನೆಯಾಗಿದ್ದು, ಪ್ರತಿ ತಿಂಗಳು 2000 ರೂ. ಸಹಾಯಧನವನ್ನು ನೀಡಲಾಗುತ್ತಿದೆ. ಫಲಾನುಭವಿಗಳ ದೈನಂದಿನ ಜೀವನೋಪಾಯಕ್ಕೆ ಸಹಕಾರಿಯಾಗಬೇಕಾದ ಈ ಹಣವನ್ನು ಸಾಲದ ನೆಪದಲ್ಲಿ ಕಡಿತಗೊಳಿಸುವುದು ಕಾನೂನುಬಾಹಿರ ಮತ್ತು ಮಾನವೀಯತೆಯ ವಿರುದ್ಧದ ಕ್ರಮ ಎಂದು ಸರ್ಕಾರ ಭಾವಿಸಿದೆ.
ಇನ್ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಹಾಗೂ ಬಲವಂತವಾಗಿ ಹಣ ಕಡಿತ ಮಾಡುವ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಮತ್ತು ಕಂದಾಯ ಇಲಾಖೆಗೆ ಸೂಚಿಸಲಾಗಿದೆ.








