ನವದೆಹಲಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ಅವರನ್ನು ಭೇಟಿಯಾಗಿ ಹಲವು ವಿಷಯಗಳನ್ನು ಚರ್ಚಿಸಿದರು. ಈ ಸಭೆ ಬಳಿಕ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಗ್ಯಾರೆಂಟಿಗಳನ್ನು ನೀಡುತ್ತಿರುವುದನ್ನು ವಿಪಕ್ಷಗಳು ಸಹಿಸುತ್ತಿಲ್ಲ ಹಾಗಾಗಿ ಈ ರೀತಿ ಬಿಜೆಪಿ ದಾಳಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ರಾಜ್ಯಪಾಲರು ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರದ ಗ್ಯಾರಂಟಿಗಳ ಮೇಲೆ ಬಿಜೆಪಿ ದಾಳಿ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ನೀಡುವುದನ್ನು ವಿಪಕ್ಷಗಳು ಸಹಿಸುತ್ತಿಲ್ಲ. ಕಳೆದ ಒಂದು ವರ್ಷದಿಂದ ಗ್ಯಾರಂಟಿಗಳ ಮೇಲೆ ದಾಳಿ ನಡೆಯುತ್ತಿದೆ.
ಎಸ್ ಸಿ ಎಸ್ ಟಿ ಒ ಬಿ ಸಿ ಸಮುದಾಯಕ್ಕೆ ಗ್ಯಾರಂಟಿ ನೀಡುವುದನ್ನು ಬಿಜೆಪಿಗರು ಸಹಿಸುತ್ತಿಲ್ಲ.ಇದು ಸಿಎಂ ಡಿಸಿಎಂ ಮೇಲಿನ ದಾಳಿಯಲ್ಲ. ಗ್ಯಾರಂಟಿಗಳ ಮೇಲಿನ ದಾಳಿ. ಕೇಂದ್ರ ಅಥವಾ ಬಿಜೆಪಿ ಏನೇ ಮಾಡಿದರು ಗ್ಯಾರಂಟಿ ನಿಲ್ಲಿಸಲ್ಲ ಮುಂದುವರಿಸುತ್ತೇವೆ. ಜನತಾ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
ಸರ್ಕಾರದ ಬಗ್ಗೆ ರಾಜ್ಯಪಾಲರ ನಡೆ ವಿರುದ್ಧ ಹೋರಾಟಕ್ಕೆ ಕರೆ ನೀಡಲಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ನಾಯಕ್ರು ಕರೆ ನೀಡಿದ್ದಾರೆ. ದೆಹಲಿಯಲ್ಲಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹೋರಾಟಕ್ಕೆ ಕರೆ ನೀಡಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದೇವೆ. ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದರು.
ಕರ್ನಾಟಕ ಗವರ್ನರ್ ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಜನರಿಂದ ಆಯ್ಕೆಯಾದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತರ ನಡೆಯುತ್ತಿದೆ ಎಚ್ ಡಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ಹಾಗೂ ಮುರುಗೇಶ್ ನಿರಾಣಿ ವಿರುದ್ಧ ಯಾಕೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ? ಕರ್ನಾಟಕ ರಾಜ್ಯಪಾಲರು ಪಕ್ಷಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ನಾಯಕರು ಕಾರ್ಯಕರ್ತರ ವಿರುದ್ಧ ಕುತಂತ್ರ ನಡೆಯುತ್ತಿದೆ. ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡುತ್ತೇವೆ. ನಾವೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗೆ ನಿಲ್ಲುತ್ತೇವೆ.ಹಿಂದುಳಿದ ಸಮುದಾಯದ ನಾಯಕನೆಂಬ ಕಾರಣಕ್ಕೆ ಸಿದ್ದರಾಮಯ್ಯ ಅವರ ಮೇಲೆ ದಾಳಿ ನಡೆಯುತ್ತಿದೆ ಎಂದು ಆಕ್ರೋಶ ಹೊರಹಾಕಿದರು.