ಹಾಸನ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಿದರೆ ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಅವರ ಪುತ್ರ ಡಾ.ಯತೀಂದ್ರ ಹೇಳಿಕೆ ಗಮನಿಸಿದರೆ, ಪಕ್ಷದಲ್ಲಿ ಅವರಿಗೆ ನಂಬಿಕೆ ಇಲ್ಲವೆಂಬುದು ಮನವರಿಕೆಯಾಗುತ್ತದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಟೀಕಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿರಲು ಕಾಂಗ್ರೆಸ್ ಪಕ್ಷ ಟಾರ್ಗೆಟ್ ಕೊಟ್ಟಿದೆಯೇ ಅಥವಾ ಅವರ ಜನಪ್ರಿಯತೆಗೆ ಆ ಸ್ಥಾನವನ್ನು ನೀಡಿದ್ದಾರೆಯೇ ಎಂಬ ಬಗ್ಗೆ ಸ್ಪಷ್ಟೀಕರಣ ನೀಡಬೇಕಿದೆ’ ಎಂದರು.
‘ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳಿಂದ ಆರ್ಥಿಕ ಹೊರೆಯಾಗುತ್ತಿದೆ ಎಂದು ಅವರ ಪಕ್ಷದ ಸಚಿವರೇ ಬಹಿರಂಗಪಡಿಸಿದ್ದಾರೆ. ಲೋಕಸಭೆ ಚುನಾವಣೆಯ ನಂತರ ಗ್ಯಾರಂಟಿ ಯೋಜನೆಗಳು ಮುಂದುವರಿಯುವುದಿಲ್ಲ. ಇದೆಲ್ಲ ರಾಜಕೀಯ ಗಿಮಿಕ್ ಎಂದು ಟೀಕಿಸಿದರು.