ಬೆಂಗಳೂರು : ರಾಜ್ಯದ ಕರಾವಳಿ ಮತ್ತು ಒಳನಾಡಿನಲ್ಲಿ ಮುಂಗಾರು ತನ್ನ ಪ್ರಭಾವ ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ 3 ದಿನಗಳಿಗೆ ಅನ್ವಯವಾಗುವಂತೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ. ಮೀನುಗಾರರಿಗೆ ಸಹ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 1 ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದೂ ಸೇರಿದಂತೆ ಮೂರು ದಿನ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಪ್ರತಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಅಲ್ಲೆಲ್ಲಿ ಸಾಧಾರಣ ಮಳೆ ಬೀಳಲಿದೆ.

ನೈಋತ್ಯ ಮಾನ್ಸೂನ್ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದೆ. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಇಂದು ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಕೆಲವು ಕಡೆ ಮಳೆಯಾಗಿದೆ.ಇನ್ನು ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Share.
Exit mobile version