ಬೆಂಗಳೂರು : ಹೊಸ ವರ್ಷದ ಶುಭಾಶಯ ತಿಳಿಸಲು ಐಪಿಎಸ್, ಐಎಎಸ್ ಸೇರಿದಂತೆ ಹಿರಿಯ ಅಧಿಕಾರಿಗಳ ವರ್ಗ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶುಭಾಶಯ ತಿಳಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯುವಜನತೆ ನಮ್ಮ ಆಸ್ತಿ, ಇವರ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸಿ ಎಂದು ಸಲಹೆ ನೀಡಿದರು.
ಇಂದು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಭೇಟಿಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದು, ಹೊಸ ವರ್ಷದ ಶುಭಾಶಯ ತಿಳಿಸಲು ಅಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿದ್ದರು. ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಿ. ಪ್ರಾದೇಶಿಕ ಅಸಮತೋಲನ ಅಸಮಾನತೆ ತೊಡೆಯಲು ಸಹಕಾರ ಬೇಕು. ಈ ವರ್ಷದ ಕಾರ್ಯ ಕ್ಷಮತೆ ಹೆಚ್ಚಿಸಿಕೊಳ್ಳೋಣ ಯುವಜನತೆ ನಮ್ಮ ಆಸ್ತಿ ಇವರ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸಿ ಎಂದು ಸಲಹೆ ನೀಡಿದರು.
ಬದುಕಿನಲ್ಲಿ ಏಳು ಬೀಳು ಸಹಜ. ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದೆ ಧೈರ್ಯದಿಂದ ಸಮಸ್ಯೆಯನ್ನು ಎದುರಿಸಬೇಕು. ನಾವು ಕಾನೂನುಗಳನ್ನು ರಚಿಸಿ ಜಾರಿ ಆಗುವ ದಿಕ್ಕಿನಲ್ಲಿ ನಿಗಾ ವಹಿಸುತ್ತೇವೆ.ಅಧಿಕಾರ ವರ್ಗ ಸಮಾಜಕ್ಕೆ ಪೂರಕವಾಗಿ ಕರ್ತವ್ಯ ನಿರ್ವಹಿಸಬೇಕು. ಎಲ್ಲಾ ವರ್ಗಗಳಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಒದಗಿಸಬೇಕು. ಇಲ್ಲದಿದ್ದರೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುವುದಿಲ್ಲ.
ಮನಮೋಹನ್ ಸಿಂಗ್ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ನೀಡಿದರು. ಆರ್ಥಿಕ ಬೆಳವಣಿಗೆ ಆಗಿ ಇದರ ಲಾಭ ಜನರಿಗೆ ಲಭಿಸುವಂತೆ ಮಾಡಿದರು. ಮಾಹಿತಿ ಹಕ್ಕು ಆಹಾರದ ಹಕ್ಕು ಶಿಕ್ಷಣದ ಹಕ್ಕು ಕಡ್ಡಾಯ ಮಾಡಿದರು ಆ ಮೂಲಕ ಸಮಾನತೆ ಎಡೆಗೆ ದೇಶವನ್ನು ಮುನ್ನಡೆಸಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 35,000 ಕೋಟಿ ಖರ್ಚು ಮಾಡಿದ್ದೇವೆ. ಪ್ರಾದೇಶಿಕ ಅಸಮಾನತೆ ಕಡಿಮೆಯಾಗಿದೆಯಾ ಎಂದು ಅಧ್ಯಯನ ನಡೆಸಿ ಈ ಬಗ್ಗೆ ವರದಿ ನೀಡಲು ಗೋವಿಂದರಾವ್ ಅವರ ಸಮಿತಿ ರಚಿಸಲಾಗಿದೆ.
ಸಮಾನ ಅವಕಾಶಗಳು ಸಿಕ್ಕಾಗ ಸಮಾನತೆ ದಿಕ್ಕಿಗೆ ನಾವು ಸಾಗಬಹುದು. ಈ ಕಾರಣದಿಂದಲೇ ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಜನರ ಕೈಯಲ್ಲಿ ಕಾಸು ಇರಬೇಕು ಜನರ ಕೊಳ್ಳುವ ಶಕ್ತಿ ಹೆಚ್ಚಾಗಬೇಕು ಇದಕ್ಕೆ ತಕ್ಕಂತೆ ಗ್ಯಾರಂಟಿ ಯೋಜನೆಗಳನ್ನು ನಾವು ಜಾರಿ ಮಾಡಿದೆವು. ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ಜನರಿಗೆ ಹಣ ತಲುಪಿಸುತ್ತಿದ್ದೇವೆ. ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಹೊಣೆ ನಿಮ್ಮದು ಎಂದು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.